ಹಿರಿಯ ಸಾಹಿತಿ, ಸಂಶೋಧಕ ಡಾ. ಚಿದಾನಂದ ಮೂರ್ತಿ ಅಸ್ತಂಗತ

ಚಿಮೂ ಅವರ ಸಂಶೋಧನೆ ಮತ್ತು ಸಾಹಿತ್ಯದ‌ ಜೊತೆಯಲ್ಲಿ ಅವರ ನೇರ ನಡೆ-ನುಡಿ, ಸೈದ್ಧಾಂತಿಕ ಭಿನ್ನಾಭಿಪ್ರಾಯವನ್ನು‌ ಮೀರಿದ ಸ್ನೇಹ ಶೀಲ ಗುಣವನ್ನೂ ನಾಡು ಸದಾ ಸ್ಮರಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

Updated: Jan 11, 2020 , 12:31 PM IST
ಹಿರಿಯ ಸಾಹಿತಿ, ಸಂಶೋಧಕ ಡಾ. ಚಿದಾನಂದ ಮೂರ್ತಿ ಅಸ್ತಂಗತ
Photo Courtesy: Twitter

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ, ಸಂಶೋಧಕ ಪ್ರೋಫೆಸರ್​ ಡಾ.ಎಂ.ಚಿದಾನಂದ ಮೂರ್ತಿ ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. 

ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ಕೊಡಿಸುವ ಸಲುವಾಗಿ ಅವಿರತವಾಗಿ ಶ್ರಮಿಸಿದ್ದವರಲ್ಲಿ ಒಬ್ಬರಾದ ಕನ್ನಡದ ಹಿರಿಯ ಸಾಹಿತಿ, ಚಿಮೂ ಎಂದೇ ಖ್ಯಾತಿ ಪಡೆದಿದ್ದ ಡಾ. ಎಂ. ಚಿದಾನಂದಮೂರ್ತಿ (88) ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಕನ್ನಡಕ್ಕೆ ಮಿಡಿಯುತ್ತಿದ್ದ, ಲೇಖಕ, ಸಂಶೋಧಕ, ಚಿಂತಕ, ಇತಿಹಾಸಕಾರರಾಗಿದ್ದ ಚಿ.ಮೂ ಇನ್ನಿಲ್ಲದ ವಿಷಯ ನೋವಿನದ್ದು ಮತ್ತು ಅವರ ಸ್ಥಾನ ಅನನ್ಯ, ಯಾರೂ ತುಂಬಲಾಗದು. ಹಂಪಿಯ ಸ್ಮಾರಕಗಳನ್ನು ಉಳಿಸುವಲ್ಲಿ ಹಾಗೂ ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ಸಿಗುವಲ್ಲಿ ಇವರ ಪ್ರಯತ್ನ ಸ್ಮರಣೀಯ. ಅವರಾತ್ಮಕ್ಕೆ ಶಾಂತಿ ದೊರಕಲಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ನಾಡಿನ ಹಿರಿಯ ಸಾಹಿತಿ, ಇತಿಹಾಸಜ್ಞ, ಹೋರಾಟಗಾರ, ವಿಶೇಷವಾಗಿ ಹಂಪೆಯ ಜೊತೆ ಬಹಳ ಆಪ್ತತೆ ಬೆಳೆಸಿಕೊಂಡಿದ್ದ, ಕನ್ನಡ ನಾಡಿನ ನೆಲ-ಜಲ-ಭಾಷೆ-ಸಂಸ್ಕೃತಿಯ ಕಾವಲುಗಾರನ ರೀತಿ ತನ್ನ ಜೀವನವನ್ನೇ ಮುಡುಪಾಗಿಟ್ಟ ಎಂ. ಚಿದಾನಂದಮೂರ್ತಿಗಳು ಇನ್ನಿಲ್ಲ ಎಂಬ ಸುದ್ದಿ ಕೇಳಿ ಆಘಾತವಾಗಿದೆ. ಅವರ ಆತ್ಮಕ್ಕೆ ಸದ್ಗತಿ ದೊರಕಲಿ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಸಂತಾಪ ಸೂಚಿಸಿದ್ದಾರೆ.

ಹಿರಿಯ ಸಾಹಿತಿ,ಸಂಶೋಧಕ ಡಾ.ಎಂ.ಚಿದಾನಂದ ಮೂರ್ತಿ ನಿಧನದ ಸುದ್ದಿ ತಿಳಿದು ದು:ಖವಾಯಿತು. ಅವರ ಸಂಶೋಧನೆ ಮತ್ತು ಸಾಹಿತ್ಯದ‌ ಜೊತೆಯಲ್ಲಿ ಅವರ ನೇರ ನಡೆ-ನುಡಿ, ಸೈದ್ಧಾಂತಿಕ ಭಿನ್ನಾಭಿಪ್ರಾಯವನ್ನು‌ ಮೀರಿದ ಸ್ನೇಹ ಶೀಲ ಗುಣವನ್ನೂ ನಾಡು ಸದಾ ಸ್ಮರಿಸುತ್ತದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು  ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಕೂಡ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದು, ಹಿರಿಯ ಸಂಶೋಧಕ,ಕನ್ನಡ ಗರುಡ ಡಾ. ಚಿದಾನಂದ ಮೂರ್ತಿ ಅವರ ನಿಧನದಿಂದ  ನಾಡು ಅಪರೂಪದ ವಿದ್ವಾಂಸರನ್ನು ಕಳೆದುಕೊಂಡಿದೆ.ಕನ್ನಡ ಶಕ್ತಿ ಕೇಂದ್ರ ಸ್ಥಾಪಿಸಿದ್ದ 'ಚಿಮೂ'ಎಂದೇ ಖ್ಯಾತರಾಗಿದ್ದ  ಹಿರಿಯ ಜೀವ ನಾಡುನುಡಿಜಲಕ್ಕಾಗಿ  ಅಹರ್ನಿಶಿ ಶ್ರಮಿಸಿದ್ದರು. ಮೃತರ ಕುಟುಂಬ ಸದಸ್ಯರಿಗೆ,ಅವರ ಅಪಾರ ಅಭಿಮಾನಿಗಳಿಗೆ  ದುಃಖ ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದಿದ್ದಾರೆ.

ಇವರಲ್ಲದೆ ಇನ್ನೂ ಹಲವು ರಾಜಕಾರಣಿಗಳು ಮತ್ತು ನಾಡಿನ ಹಲವು ಸಾಹಿತಿಗಳು ಚಿಮೂ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.