ಬೆಂಗಳೂರು: ಭಾರತದ ಗೌರವಾನ್ವಿತ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಇಂದು ಕರ್ನಾಟಕ ಪ್ರವಾಸ ಕೈಗೊಂಡಿದ್ದು, ಬೆಳಗಿನ ಜಾವ ಯಲಹಂಕ ಏರ್ ಫೋರ್ಸ್ ಸ್ಟೇಷನ್ ಗೆ ಆಗಮಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಉಪರಾಷ್ಟ್ರಪತಿಗಳಿಗೆ ಹೂಗುಚ್ಚ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಮಯದಲ್ಲಿ ಕೇಂದ್ರದ ಬೃಹತ್ ಕೈಗಾರಿಕೆಗಳ ಸಚಿವ ಹೆಚ್. ಡಿ ಕುಮಾರಸ್ವಾಮಿ, ನಗರಾಭಿವೃದ್ಧಿ ಸಚಿವ ಸುರೇಶ್ ಬಿ.ಎ (ಬೈರತಿ), ಸರ್ಕಾರದ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ ಎಂ.ಎ. ಸಲೀಮ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಜಿ, ಜೆಡಿಎಸ್ ಮುಖಂಡ ಪುಟ್ಟರಾಜು, ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಉಪರಾಷ್ಟ್ರಪತಿಗಳು ಇಂದು ಬೆಂಗಳೂರಿನ ಯಲಹಂಕ ಏರ್ ಫೋರ್ಸ್ ಸ್ಟೇಷನ್‌ನಿಂದ ಹೆಲಿಕಾಪ್ಟರ್ ಮೂಲಕ ಹಾಸನ ಜಿಲ್ಲೆಯ ಶ್ರವಣಬೆಳಗೊಳ, ಮಂಡ್ಯ ಜಿಲ್ಲೆಯ ಮೇಲುಕೋಟೆ ಹಾಗೂ ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಇಂದೇ ನವದೆಹಲಿಗೆ ಪ್ರಯಾಣಿಸಲಿದ್ದಾರೆ.









