ಕೊಡಗು: ಹಿಂದೆಂದೂ ಕಂಡರಿಯದಂತೆ ಕೊಡಗು ಜಿಲ್ಲೆಯಲ್ಲಿ ಪ್ರವಾಹ ಎದುರಾಗಿದ್ದು, ಮನೆಗಳು, ಗುಡ್ಡಗಳು ಕುಸಿಯುವುದು ಸಾಮಾನ್ಯವಾಗಿಬಿಟ್ಟಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತಾಗಿರುವ ಸಿಬ್ಬಂದಿಯೇ ಮೇಲೆಯೇ ಗುಡ್ಡ ಕುಸಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.


COMMERCIAL BREAK
SCROLL TO CONTINUE READING

ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಶುಕ್ರವಾರ ರಾತ್ರಿ ಕೊಡಗು-ಮಂಗಳೂರು ಮಾರ್ಗದ ಜೋಡುಪಾಲ ಎಂಬಲ್ಲಿ ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರ ನಿಷೇಧವಾಗಿತ್ತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಧಾವಿಸಿದ್ದ ರಕ್ಷಣಾ ಸಿಬ್ಬಂದಿ ಮಣ್ಣು ತೆರವು ಕಾರ್ಯಾಚರಣೆಯಲ್ಲಿ ನಿರತರಾಗಿದ್ದರು. ಆದರೆ, ಕಾರ್ಯಾಚರಣೆ ನಡೆಯುತ್ತಿದ್ದ ಸಂದರ್ಭದಲ್ಲಿಯೇ ಅದೇ ಸ್ಥಳದಲ್ಲಿ ಮತ್ತೊಂದು ಗುಡ್ಡ ಕುಸಿಯುತ್ತಿದ್ದಂತೆ ರಕ್ಷಣಾ ಸಿಬ್ಬಂದಿ ಜೀವ ಉಳಿಸಿಕೊಳ್ಳಲು ದೂರ ಓಡತೊಡಗಿದರು. ಆದರೆ ಕುಸಿದ ಮಣ್ಣಿನಲ್ಲಿ ಓರ್ವ ಸಿಬ್ಬಂದಿ ಸಿಲುಕಿಕೊಂಡರಾದರೂ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ.


ಅಲ್ಲದೆ, ಅತಿವೃಷ್ಟಿ ಪೀಡಿತ ಕೊಡಗು ಜಿಲ್ಲೆಯಲ್ಲಿ ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆಗೆ ಹೆಚ್ಚುವರಿ ಸೇನಾ ಸಿಬ್ಬಂದಿಯನ್ನು ನಿಯೋಜಿಸುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು  ಮಾಡಿದ ಮನವಿಗೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ ಜಿಲ್ಲೆಯ ಪರಿಸ್ಥಿತಿ ಯನ್ನು ಅವಲೋಕಿಸಲು ವೈಮಾನಿಕ ಸಮೀಕ್ಷೆ ನಡೆಸಲು ವಾಯುಪಡೆಯ ಹೆಲಿಕಾಪ್ಟರ್ ಒದಗಿಸುವಂತೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಾಡಿದ ಮನವಿಗೂ ಸ್ಪಂದಿಸಿದ್ದಾರೆ ಎನ್ನಲಾಗಿದೆ.