ಜೂ.03 ರಂದು ವಿಧಾನ ಪರಿಷತ್ ಚುನಾವಣೆ: ವಿಶೇಷ ಸಾಂದರ್ಭಿಕ ರಜೆ ಮಂಜೂರು
ಜೂನ್ 03 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಮತದಾನಕ್ಕೆ ನೋಂದಣಿ ಮಾಡಿಕೊಂಡಿರುವ ಎಲ್ಲಾ ಪದವೀಧರ ಮತದಾರರಿಗೆ ಮತದಾನ ಮಾಡಲು ಜೂನ್ 03 ರಂದು ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ.
ಬೆಂಗಳೂರು: ಜೂನ್ 03 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಮತದಾನಕ್ಕೆ ನೋಂದಣಿ ಮಾಡಿಕೊಂಡಿರುವ ಎಲ್ಲಾ ಪದವೀಧರ ಮತದಾರರಿಗೆ ಮತದಾನ ಮಾಡಲು ಜೂನ್ 03 ರಂದು ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ.
ವಿಧಾನ ಪರಿಷತ್ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕಾರ ರಂಗದ ಸಂಘ ಸಂಸ್ಥೆಗಳು, ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಎಸ್ಟಾಬ್ಲಿಷ್‍ಮೆಂಟ್‍ಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅರ್ಹ ಮತದಾರರಿಗೆ ಸೀಮಿತವಾದಂತೆ ಮತ ಚಲಾಯಿಸುವ ಮತದಾರರಿಗೆ ಜೂನ್ 03 ಸೋಮವಾರದಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವಂತೆ ಸಿಆಸು ಇಲಾಖೆಯ ಅಧೀನ ಕಾರ್ಯದರ್ಶಿ-1 ವಿಜಯ್‍ಕುಮಾರ್ ಹೆಚ್.ಬಿ ಅವರು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಕೈಗೆಟುಕುವ ಬೆಲೆಯಲ್ಲಿ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಮತ್ತೊಂದು ಎಲೆಕ್ಟ್ರಿಕ್ ಸ್ಕೂಟರ್
ಕ್ಷೇತ್ರ ಮತ್ತು ವ್ಯಾಪ್ತಿಗೊಳಪಡುವ ಜಿಲ್ಲೆಗಳು:
ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರ ವ್ಯಾಪ್ತಿಯಲ್ಲಿ ಬೀದರ್, ಗುಲ್ಬರ್ಗ, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ (ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕು ಒಳಗೊಂಡಂತೆ).
ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರ ವ್ಯಾಪ್ತಿಯಲ್ಲಿ ಶಿವಮೊಗ್ಗ (ದಾವಣಗೆರೆ ಜಿಲ್ಲೆಯ ಚನ್ನಗಿರಿ ಮತ್ತು ಹೊನ್ನಾಳಿ ತಾಲ್ಲೂಕುಗಳನ್ನೊಳಗೊಂಡಂತೆ) ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗು.
ಬೆಂಗಳೂರು ಪದವೀಧರ ಕ್ಷೇತ್ರ ವ್ಯಾಪ್ತಿಯಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ.
ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಗೆ ಚಿತ್ರದುರ್ಗ, ದಾವಣಗೆರೆ (ಚನ್ನಗಿರಿ, ಹೊನ್ನಾಳಿ ಮತ್ತು ಹರಪನಹಳ್ಳಿ ತಾಲ್ಲೂಕುಗಳನ್ನು ಹೊರತುಪಡಿಸಿ) ತುಮಕೂರು ಮತ್ತು ಕೋಲಾರ.
ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಗೆ ಶಿವಮೊಗ್ಗ (ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ತಾಲ್ಲೂಕುಗಳನ್ನೊಳಗೊಂಡಂತೆ), ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗು.
ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ ವ್ಯಾಪ್ತಿಗೆ ಮೈಸೂರು, ಚಾಮರಾಜ ನಗರ, ಮಂಡ್ಯ ಮತ್ತು ಹಾಸನ ಜಿಲ್ಲೆಗಳು ಒಳಪಡುತ್ತವೆ.