ಬೆಂಗಳೂರು: ಕೊರೋನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕಲಬುರ್ಗಿ ಜಿಲ್ಲೆಯ ಗಡಿಭಾಗ ಆಳಂದ ತಾಲೂಕಿನ ಹೀರೊಳ್ಳಿ ಚೆಕ್ ಪೋಸ್ಟ್ ನಲ್ಲಿ ಹೊರ ರಾಜ್ಯದಿಂದ ಬರುವ ಪ್ರಯಾಣಿಕರಿಂದ ಸೇವಾ ಸಿಂಧು ತಂತ್ರಾಂಶದಲ್ಲಿ ನೋಂದಣಿ ಮಾಡಲು ಹಣ ಪಡೆಯುತ್ತಿರುವ ಆರೋಪದ ಹಿನ್ನೆಲೆಯಲ್ಲಿ ತಡಕಲ್ ಗ್ರಾಮ‌ ಲೆಕ್ಕಾಧಿಕಾರಿ ಮಲ್ಲಿನಾಥ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತು ಮಾಡಿ ಕಲಬುರಗಿ ಸಹಾಯಕ ಆಯುಕ್ತರು ಆದೇಶಿಸಿದ್ದಾರೆ.


COMMERCIAL BREAK
SCROLL TO CONTINUE READING

ಮಹಾರಾಷ್ಟ್ರ ಸೇರಿದಂತೆ ಇತರೆ ರಾಜ್ಯಗಳಿಂದ ನೋಂದಣಿ ಮಾಡಿಕೊಳ್ಳದೆ ಆಗಮಿಸುವ ವಲಸೆ ಕಾರ್ಮಿಕರಿಗೆ ಸೇವಾ ಸಿಂಧು ತಂತ್ರಾಂಶದಲ್ಲಿ ಉಚಿತವಾಗಿ ನೋಂದಣಿ ಮಾಡಿಸಿಕೊಳ್ಳಲು ಇವರನ್ನು ನಿಯೋಜಿಸಲಾಗಿತ್ತು. ಇವರು ಅಲ್ಲಿನ ಪ್ರಯಾಣಿಕರಲ್ಲಿ ಹಣ ವಸೂಲು ಮಾಡುತ್ತಿರುವ ಬಗ್ಗೆ ಪ್ರಯಾಣಿಕರು ಧ್ವನಿಸುರುಳಿಯೊಂದಿಗೆ ದೂರು ನೀಡಿದ್ದರು.


ಆರೋಪವು ಮೇಲ್ನೋಟಕ್ಕೆ ಸತ್ಯ ಕಂಡುಬಂದ ಹಿನ್ನೆಲೆಯಲ್ಲಿ ಗ್ರಾಮ ಲೆಕ್ಕಾಧಿಕಾರಿ ಮಲ್ಲಿನಾಥ್ ಇವರನ್ನು ಕರ್ನಾಟಕ ನಾಗರೀಕ ಸೇವೆ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು-1957 ನಿಯಮ 10 (1) (ಡಿ) ರನ್ವಯ ಇಲಾಖಾ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತು ಮಾಡಿ ಸಹಾಯಕ ಆಯುಕ್ತರು ಜುಲೈ 8 ರಂದು ಆದೇಶ ಹೊರಡಿಸಿದ್ದಾರೆ.


ನೌಕರರು ಅಮಾನತ್ತಿನ ಅವಧಿಯಲ್ಲಿ ನಿಯಮಾನುಸಾರ ಜೀವನಾಧಾರ ಭತ್ಯೆ ಪಡೆಯಲು ಅರ್ಹರಾಗಿರುತ್ತಾರೆ. ಇನ್ನೂ ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೆ ಕೇಂದ್ರಸ್ಥಾನ ಬಿಡುವಂತಿಲ್ಲ ಎಂದು ನೌಕರರಿಗೆ ಆದೇಶದಲ್ಲಿ ತಿಳಿಸಲಾಗಿದೆ.