ರಾಮಮಂದಿರ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ, ಹಕ್ಕೊತ್ತಾಯ ಮಾಡುತ್ತಿದ್ದೇವೆ ಅಷ್ಟೇ: ಜಮೀರ್ ಖಾನ್
ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಕೇವಲ ಕರ್ನಾಟಕದ ಮುಸ್ಲಿಮರಷ್ಟೇ ಅಲ್ಲ, ಇಡೀ ದೇಶಾದ್ಯಂತ ಯಾವ ಮುಸ್ಲಿಮರೂ ವಿರೋಧ ವ್ಯಕ್ತಪಡಿಸುತ್ತಿಲ್ಲ ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.
ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಮುಸ್ಲಿಮರು ಎಂದೂ ವಿರೋಧಿಸಿಲ್ಲ. ಆದರೆ ನಮ್ಮ ಹಕ್ಕೊತ್ತಾಯ ಮಾಡುತ್ತಿದ್ದೇವಷ್ಟೇ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಇಂದು ನಡೆದ ಟಿಪ್ಪು ಜಯಂತಿ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ವರ್ಷಗಳಿಂದ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಗೆ ಒಳಗಾಗಿರುವ ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಕೇವಲ ಕರ್ನಾಟಕದ ಮುಸ್ಲಿಮರಷ್ಟೇ ಅಲ್ಲ, ಇಡೀ ದೇಶಾದ್ಯಂತ ಯಾವ ಮುಸ್ಲಿಮರೂ ವಿರೋಧ ವ್ಯಕ್ತಪಡಿಸುತ್ತಿಲ್ಲ. ರಾಮ ಮಂದಿರ ನಿರ್ಮಾಣ ಮಾಡಿ, ಆದರೆ ಆದೇ ರೀತಿಯಲ್ಲಿ ಧ್ವಂಸಗೊಂಡಿರುವ ಬಾಬರಿ ಮಸೀದಿಯನ್ನೂ ಪುನರ್ ನಿರ್ಮಿಸಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ ಎಂದು ಜಮೀರ್ ಅಹ್ಮದ್ ಖಾನ್ ಹೇಳಿದರು.
ಸದ್ಯ ರಾಮಜನ್ಮಭೂಮಿ ವಿವಾದ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿದ್ದು, 2019ರ ಜನವರಿಯಲ್ಲಿ ಅಂತಿಮ ವಿಚಾರಣೆ ಆರಂಭಿಸುವುದಾಗಿ ನ್ಯಾಯಾಲಯ ಹೇಳಿದೆ.