ಮೈಸೂರು: ನರೇಂದ್ರ ಮೋದಿ, ಅಮಿತ್ ಷಾ ರಾಜ್ಯಕ್ಕೆ ಎಷ್ಟೇ ಬಾರಿ ಬಂದರೂ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಎಐಸಿಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರವಾಸ ಹಿನ್ನೆಲೆಯಲ್ಲಿ ಮೈಸೂರಿನ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಒಂದು ಬಾರಿ ಅಲ್ಲ, ನೂರು ಬಾರಿ ರಾಜ್ಯ ಪ್ರವಾಸ ಮಾಡಿದರೂ ಏನೂ ಮಾಡಲು ಸಾಧ್ಯವಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಇದೆ. ಇಲ್ಲಿನ ಜನರು ಪ್ರಬುದ್ಧರಾಗಿದ್ದಾರೆ. ಯಾರು ಕೆಲಸ ಮಾಡುತ್ತಾರೋ ಅವರಿಗೆ ಬೆಂಬಲ ನೀಡುತ್ತಾರೆ. ಹಾಗಾಗಿ ಈ ಬಾರಿ ಚುನಾವಣೆಯಲ್ಲಿ ಗೆಲ್ಲುವುದು ನಾವೇ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. 


ಬಿಜೆಪಿಯವರು ಕರಾವಳಿಯನ್ನು ಕೋಮುವಾದದ ಕೇಂದ್ರ ಮಾಡಲು ಹೊರಟಿದ್ದರು. ಅಲ್ಲಿಯೂ ನಮ್ಮ ಜನಾಶೀರ್ವಾದ ಯಾತ್ರೆ ಯಶಸ್ವಿಯಾಗಿದೆ. ಅಥಣಿಯಿಂದ ಹಿಡಿದು ಚಾಮರಾಜನಗರ, ಮಂಡ್ಯವರೆಗೆ ಎಲ್ಲ ಕಡೆಯೂ ನಮಗೆ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದು ಜನರು ನಮ್ಮ ಪರ ಇದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದರು. 


ಬಂಡಾಯ ಶಾಸಕರ ಸೇರ್ಪಡೆಯಿಂದ ಪಕ್ಷಕ್ಕೆ ಬಲ
ಇದೇ ವೇಳೆ ಬಂಡಾಯ ಶಾಸಕರ ಕಾಂಗ್ರೆಸ್ ಸೇರ್ಪಡೆ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಜೆಡಿಎಸ್ ಬಂಡಾಯ ಶಾಸಕರು ಹಾಗೂ ಮಾಜಿ ಸಚಿವ ಎಂ.ಸಿ.ನಾಣಯ್ಯ ಕೂಡ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಇದರಿಂದ ಸಹಜವಾಗಿಯೇ ಪಕ್ಷದ ಬಲ ಹೆಚ್ಚಾಗಲಿದೆ ಎಂದು ತಿಳಿಸಿದರು.