ಜನರ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ಸಮ್ಮಿಶ್ರ ಸರ್ಕಾರದ ವೈಫಲ್ಯ ಖಂಡಿಸಿ ರಾಜೀನಾಮೆ: ಹೆಚ್.ವಿಶ್ವನಾಥ್
ಸಮ್ಮಿಶ್ರ ಸರ್ಕಾರ ಕರ್ನಾಟಕದ ಜನತೆಯ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಹೆಚ್.ವಿಶ್ವನಾಥ್ ಹೇಳಿದ್ದಾರೆ.
ಬೆಂಗಳೂರು: ನಾವು ಯಾವುದೇ 'ಆಪರೇಶನ್ ಕಮಲ'ಕ್ಕೆ ಒಳಗಾಗಿಲ್ಲ. ಜನರ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ಸಮ್ಮಿಶ್ರ ಸರ್ಕಾರ ವಿಫಲವಾದ ಹಿನ್ನೆಲೆಯಲ್ಲಿ ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದೇವೆ ಎಂದು ಜೆಡಿಎಸ್ ಶಾಸಕ ಹಾಗೂ ಮಾಜಿ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಹೇಳಿದ್ದಾರೆ.
ಸ್ಪೀಕರ್ ರಮೇಶ್ ಕುಮಾರ್ ಅವರ ಕಚೇರಿಯಲ್ಲಿ ಆಪ್ತ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ ಬಳಿಕ ರಾಜ್ಯಪಾಲರನ್ನು ಭೇಟಿ ಮಾಡಿದ ಅತೃಪ್ತ ಶಾಸಕರ ತಂಡ ರಾಜೀನಾಮೆ ಅಂಗೀಕರಿಸುವಂತೆ ಮನವಿ ಸಲ್ಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ವಿಶ್ವನಾಥ್, ಇದುವರೆಗೆ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ 14 ಶಾಸಕರು ರಾಜೀನಾಮೆ ನೀಡಿದ್ದಾರೆ. ನಾವು ರಾಜ್ಯಪಾಲರನ್ನೂ ಭೇಟಿ ಮಾಡಿದ್ದೇವೆ. ಅಲ್ಲದೆ, ರಾಜೀನಾಮೆಯನ್ನು ಸ್ವೀಕರಿಸುವಂತೆ ಸ್ಪೀಕರ್ ರಮೇಶ್ ಕುಮಾರ್ ಅವರಿಗೂ ಪತ್ರ ಬರೆದಿರುವುದಾಗಿ ತಿಳಿಸಿದರು.
ಮುಂದುವರೆದು ಮಾತನಾಡುತ್ತಾ, ಸಮ್ಮಿಶ್ರ ಸರ್ಕಾರ ಕರ್ನಾಟಕದ ಜನತೆಯ ನಿರೀಕ್ಷೆಗಳನ್ನು
ಈಡೇರಿಸುವಲ್ಲಿ ವಿಫಲವಾಗಿದೆ. ಹೀಗಾಗಿ ರಾಜೀನಾಮೆ ಸಲ್ಲಿಸಿದ್ದು, ಸ್ಪೀಕರ್ ಅವರು ಮಂಗಳವಾರದೊಳಗೆ ರಾಜೀನಾಮೆ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಸರ್ಕಾರ ತನ್ನ ಕಾರ್ಯವೈಖರಿಯ ಬಗ್ಗೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತರಾಗಿ ರಾಜೀನಾಮೆ ಸಲ್ಲಿಸಿದ್ದೇವೆ ಎಂದು ಹೆಚ್.ವಿಶ್ವನಾಥ್ ಹೇಳಿದ್ದಾರೆ.