ಬೆಂಗಳೂರು: ಈ ಬಾರಿಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಲವು ಜನಪರ ಘೋಷಣೆಗಳನ್ನು ಮಾಡಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಸಿಎಂ ಬೊಮ್ಮಾಯಿಯವರು ಆರೋಗ್ಯ ಕ್ಷೇತ್ರಕ್ಕೂ ಕೂಡ ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. 


COMMERCIAL BREAK
SCROLL TO CONTINUE READING

ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿ ಆರೋಗ್ಯ ಸುಧಾರಣೆಗಾಗಿ ಸುಮಾರು 720 ಕೋಟಿ ಮೀಸಲಿರಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, 202 ಕೋಟಿ ರೂ. ವೆಚ್ಚದಲ್ಲಿ ಮೈಸೂರು, ಶಿವಮೊಗ್ಗ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಕಿದ್ವಾಯಿ ಸಂಸ್ಥೆಯಡಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳಳನ್ನು ಸ್ಥಾಪಿಸುವುದಾಗಿ ಘೋಷಣೆ ಮಾಡಿದ್ದಾರೆ.


ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಅಡಿಯಲ್ಲಿ ಹೆಚ್ಚಿನ ಖಾಸಗಿ ಆಸ್ಪತ್ರೆಗಳನ್ನು ಸೇರ್ಪಡೆಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಘೋಷಿಸಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ರಕ್ತಹೀನತೆಯ ದೊಡ್ಡ ಸವಾಲನ್ನು ಎದುರಿಸಲು ಬಹು ಆಯಾಮಗಳ ದೃಷ್ಟಿಕೋನದೊಂದಿಗೆ ವಿಶೇಷ ಯೋಜನೆಯನ್ನು ರೂಪಿಸಲಾಗಿದೆ. ಇದರಡಿಯಲ್ಲಿ ನವಜಾತ ಶಿಶುಗಳು, ಮಕ್ಕಳು, ಹದಿಹರೆಯದವರು. ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರಲ್ಲಿ ಮತ್ತು ಸಂತಾನೋತ್ಪತ್ತಿ ವಯಸ್ಸಿನ (15-49 ವರ್ಷಗಳು) ಮಹಿಳೆಯರಲ್ಲಿ ರಕ್ತಹೀನತೆ ಹಾಗೂ ಅಪೌಷ್ಟಿಕತೆಯನ್ನು ನಿವಾರಿಸಲು ಉದ್ದೇಶಿತ ಪರೀಕ್ಷೆ, ಚಿಕಿತ್ಸೆ, ಜನಜಾಗೃತಿ ಹಾಗೂ ತರಬೇತಿಗೆ 100 ಕೋಟಿ ರೂ. ಗಳನ್ನು ಒದಗಿಸಲಾಗಿದೆ ಎಂದರು.


ಇದನ್ನೂ ಓದಿ- ಮಹಿಳೆಯರಿಗಾಗಿ 'ಗೃಹಿಣಿ ಶಕ್ತಿ' ಯೋಜನೆ ಘೋಷಿಸಿದ ಸಿಎಂ ಬೊಮ್ಮಾಯಿ


ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳ ಸಂಖ್ಯೆ ಹೆಚ್ಚಳ:
'ಮನೆ ಮನೆಗೆ ಆರೋಗ್ಯ' ಎಂಬ ಕಾರ್ಯಕ್ರಮದಡಿಯಲ್ಲಿ ರಾಜ್ಯದ ಗ್ರಾಮೀಣ ಜನತೆಗೆ 2023-24ನೇ ಸಾಲಿನಲ್ಲಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಎರಡು ಬಾರಿ ಹಳ್ಳಿಗಳಲ್ಲಿ ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗುವುದು. ಇದರಿಂದ ತೀವ್ರವಾದ ಕಾಯಿಲೆಗಳನ್ನು ಆರಂಭದಲ್ಲಿಯೇ ಪತ್ತೆಹಚ್ಚಿ ಜನರ ಆರೋಗ್ಯ ಕಾಪಾಡುವ ಗುರಿ ಹೊಂದಲಾಗಿದೆ. ಇದರೊಂದಿಗೆ ಈ ಯೋಜನೆಯಡಿ ದೀರ್ಘಕಾಲಿಕ ಕಾಯಿಲೆಗಳಿಂದ ಬಳಲುತ್ತಿರುವವರ ಮನೆ ಬಾಗಿಲಿಗೆ ಔಷಧಿಗಳನ್ನು ತಲುಪಿಸಲು ಕ್ರಮವಹಿಸಲಾಗುವುದು. ಇದಕ್ಕಾಗಿ ಕಡಿಮೆ ದರದಲ್ಲಿ ಸಾರ್ವಜನಿಕರಿಗೆ ಔಷಧಿಗಳನ್ನು ಒದಗಿಸುತ್ತಿರುವ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳ ಸಂಖ್ಯೆಯನ್ನು ರಾಜ್ಯಾದ್ಯಂತ ಇನ್ನಷ್ಟು ಹೆಚ್ಚಿಸಲಾಗುವುದು ಎಂದು ಮಾಹಿತಿ ನೀಡಿದರು. 


ಕ್ಯಾನ್ಸರ್ ಪತ್ತೆ ಹಚ್ಚಲು 'ಜೀವಸುಧೆ':-
ಕ್ಯಾನ್ಸರ್ ರೋಗವು ಆರಂಭಿಕ ಹಂತದಲ್ಲಿಯೇ ಪತ್ತೆಯಾದ ಸಕಾಲಿಕ ಚಿಕಿತ್ಸೆಯಿಂದ ರೋಗಿಗಳು ಚೇತರಿಸಿಕೊಳ್ಳಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ಸ್ತನ, ಬಾಯಿ ಮತ್ತು ಗರ್ಭಕಂಠದ ಕ್ಯಾನ್ಸರ್ ಪತ್ತೆ ಹಚ್ಚಲು 'ಜೀವಸುಧೆ' ಎಂಬ ವ್ಯಾಪಕ ತಪಾಸಣಾ (Testing and Screening) ಕಾರ್ಯಕ್ರಮವನ್ನು  ರಾಜ್ಯಾದ್ಯಂತ ಆಯೋಜಿಸಲಾಗುವುದು. ಅಗತ್ಯವಿರುವವರಿಗೆ ಹೆಚ್ಚಿನ ಚಿಕಿತ್ಸೆಯನ್ನು ಪಡೆಯಲು ತೃತೀಯ ಆರೈಕೆ ಆಸ್ಪತ್ರೆಗಳಿಗೆ ಕಳುಹಿಸಲಾಗುವುದು. ಕ್ಯಾನ್ಸರ್ ಪತ್ತೆಗೆ ಅಗತ್ಯವಿರುವ ಸಾಧನಗಳ ಖರೀದಿಗಾಗಿ 12 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ. 


ಇದನ್ನೂ ಓದಿ- Karnataka Budget 2023 : ಅಂಗನವಾಡಿ, ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ  


'ವಾತ್ಸಲ್ಯ' ಯೋಜನೆ :
ಮಕ್ಕಳ ಆರೋಗ್ಯದ ರಕ್ಷಣೆಗೆ ಮುನ್ನೆಚ್ಚರಿಕೆಯ ಕ್ರಮವಾಗಿ ಗ್ರಾಮೀಣ ಪ್ರದೇಶಗಳಲ್ಲಿ ವರ್ಷಕ್ಕೆರಡು ಬಾರಿ 6 ವರ್ಷದೊಳಗಿನ ಮಕ್ಕಳ ಆರೋಗ್ಯ ತಪಾಸಣೆ ಮಾಡಲು 'ವಾತ್ಸಲ್ಯ' ಯೋಜನೆ ರೂಪಿಸಲಾಗುವುದು, ಇದರ ಮೂಲಕ ಮಕ್ಕಳಲ್ಲಿ ಆರೋಗ್ಯ, ನ್ಯೂನತೆಗಳು ಹಾಗೂ ಸಮಸ್ಯೆಗಳನ್ನು ಪ್ರಾರಂಭದಲ್ಲಿಯೇ ಪತ್ತೆ ಮಾಡಿ, ಸೂಕ್ತ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗುವುದು. ಇದರಿಂದ ಮಕ್ಕಳಲ್ಲಿ ಸಂಭಾವ್ಯ ದೈಹಿಕ ನ್ಯೂನತೆಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ. ಸ್ವಸ್ಥ ಸಮಾಜ ನಿರ್ಮಾಣದ ನಿಟ್ಟಿನಲ್ಲಿ ಇದು ಮಹತ್ವಪೂರ್ಣ ಕ್ರಮವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.


ಯೋಜನೆಗಳ ಡಿಜಿಟಲೀಕರಣ:
ಇದರೊಂದಿಗೆ ಆರೋಗ್ಯ ಇಲಾಖೆಯ ಸೇವೆಗಳನ್ನು ಇನ್ನಷ್ಟು ಸರಳ ಮತ್ತು ಪಾರದರ್ಶಕಗೊಳಿಸುವ ನಿಟ್ಟಿನಲ್ಲಿ ಎಲ್ಲಾ ಯೋಜನೆಗಳನ್ನು ಡಿಜಿಟಲೀಕರಣಗೊಳಿಸಲಾಗುವುದು, ದಾಖಲೆಗಳನ್ನು ಒಂದೆಡೆ ಸುರಕ್ಷಿತವಾಗಿ ಕ್ರೂಢೀಕರಿಸಲಾಗುವುದು, ರೋಗಿಗಳ ಸಮ್ಮತಿಯೊಂದಿಗೆ ವೈದ್ಯಕೀಯ ದಾಖಲಾತಿಗಳು, ತಕ್ಷಣವಾಗಿ ಲಭ್ಯಪಡಿಸುವ ಮೂಲಕ ಅವರ ಮುಂದಿನ ಚಿಕಿತ್ಸೆಗೆ ಇದರಿಂದ ಸಹಾಯವಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.