ಮತ್ತೆ `ಕೈ` ಹಿಡಿಯುತ್ತಾರಾ ಎಸ್.ಎಂ.ಕೃಷ್ಣ?
ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣಾ ಕಾಂಗ್ರೆಸ್ ಪಕ್ಷಕ್ಕೆ ವಾಪಸ್ಸಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಬಲವರ್ಧನೆ ಸಂಬಂಧ ಈ ಹಿಂದೆ ಪಕ್ಷ ತೊರೆದಿದ್ದ ಹಿರಿಯ ನಾಯಕರನ್ನು ಪಕ್ಷಕ್ಕೆ ಮರಳಿ ತರಲು ಕಾಂಗ್ರೆಸ್ ರಣ ತಂತ್ರ ರೂಪಿಸಿದೆ.
ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣಾ ಕಾಂಗ್ರೆಸ್ ಪಕ್ಷಕ್ಕೆ ವಾಪಸ್ಸಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿಯಲ್ಲಿ ಸೂಕ್ತ ಸ್ಥಾನಮಾನ ದೊರೆಯದೆ ಎಸ್.ಎಂ.ಕೃಷ್ಣಾ ಅವರು ಅಸಮಾಧಾನಗೊಂಡಿದ್ದಾರೆ. ಅಲ್ಲದೆ, ತಮ್ಮ ಪುತ್ರಿ ಶಾಂಭವಿಗೆ ಮದ್ದೂರು ಅಥವಾ ರಾಮನಗರದಿಂದ ಈ ಬಾರಿ ಚುನಾವಣೆಯಲ್ಲಿ ಟಿಕೆಟ್ ನೀಡುವಂತೆ ಕೇಳಿದ್ದರು ಎನ್ನಲಾಗಿದ್ದು, ಇದಕ್ಕೆ ಬಿಜೆಪಿ ಸೂಕ್ತವಾಗಿ ಸ್ಪಂದಿಸಿಲ್ಲ ಎಂದು ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಎಸ್.ಎಂ.ಕೃಷ್ಣಾ ಅವರನ್ನು ಪಕ್ಷಕ್ಕೆ ಮರಳಿ ಕರೆತರಲು ಡಿ.ಕೆ.ಶಿವಕುಮಾರ್ ಮತ್ತು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ನೇತೃತ್ವದಲ್ಲಿ ಎಸ್.ಎಂ.ಕೃಷ್ಣ ಅವರೊಂದಿಗೆ ಮೊದಲ ಸುತ್ತಿನ ಮಾತುಕತೆ ನಡೆಸಲಾಗಿದ್ದು, ಇದಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕೂಡ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದೆ. ಆದರೆ, ನಿಜಕ್ಕೂ ಎಸ್.ಎಂ.ಕೃಷ್ಣಾ ಕಾಂಗ್ರೆಸ್ ಸೇರಲಿದ್ದಾರೆಯೇ, ಇಲ್ಲವೇ ಎಂಬುದನ್ನು ಕಾದು ನೋಡಬೇಕಿದೆ.