‘ಆಪರೇಷನ್’ ವೋಟರ್ ಐಡಿ ಹಗರಣ?: ಸಿಎಂ ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಮತದಾರರ ಪಟ್ಟಿ ಪರಿಷ್ಕರಣೆ ಎನ್ನುವುದು ಕೆಜಿಎಫ್ ಚಿತ್ರದ ‘ರಾಕಿಭಾಯ್’ನ ಸೇಡಿನ ಕತೆಯೂ ಅಲ್ಲ, ಕಾಂತಾರ ಚಿತ್ರದ ಗುಳಿಗ-ಪಂಜುರ್ಲಿಯ ದಂತಕತೆಯೂ ಅಲ್ಲವೆಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Written by - Puttaraj K Alur | Last Updated : Nov 18, 2022, 04:32 PM IST
  • ಮತದಾರರ ಪಟ್ಟಿ ಪರಿಷ್ಕರಣೆಯ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಬೊಮ್ಮಾಯಿ ವಿರುದ್ಧ ನಾವು ದೂರು ನೀಡಿದ್ದೆವು
  • 20 ಸಾವಿರ ಸಂಬಳದ ಬಡಪಾಯಿ ಏಜೆಂಟನನ್ನು ಬಲಿಪಶು ಮಾಡಿ ಸಿಎಂ ತಾವು ಪಾರಾಗುವ ಸಂಚು ನಡೆಸಿದ್ದಾರೆ
  • ಸಿಎಂ ಬೊಮ್ಮಾಯಿ ತಮ್ಮನ್ನು ರಕ್ಷಿಸಿಕೊಳ್ಳಲು ಆಪರೇಷನ್ ವೋಟರ್ ಹಗರಣವನ್ನು ಜಾತಿಗಣತಿಗೆ ಹೋಲಿಸಿದ್ದಾರೆ
‘ಆಪರೇಷನ್’ ವೋಟರ್ ಐಡಿ ಹಗರಣ?: ಸಿಎಂ ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ title=
ಸಿಎಂ ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಆಪರೇಷನ್ ವೋಟರ್ ಹಗರಣವನ್ನು ಹಾಸ್ಯಾಸ್ಪದ ಎಂದು ತಳ್ಳಿಹಾಕಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಹಗರಣದ ರೂವಾರಿಗಳನ್ನು ರಕ್ಷಿಸಲು, ಸಂಸ್ಥೆಯ ಒಬ್ಬ ಏಜೆಂಟನ ವಿರುದ್ಧ ಪೊಲೀಸರಿಂದ ಎಫ್ಐಆರ್ ಹಾಕಿಸಿ ತಮ್ಮ ಸರ್ಕಾರದ ಕೆಲಸ ಎಷ್ಟು ಹಾಸ್ಯಾಸ್ಪದ ಎನ್ನುವುದನ್ನು ಸಾಬೀತುಪಡಿಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

‘ಮತದಾರರ ಪಟ್ಟಿ ಪರಿಷ್ಕರಣೆಯ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಬೊಮ್ಮಾಯಿ ವಿರುದ್ಧವೇ ನಾವು ದೂರು ನೀಡಿದ್ದೆವು. ಮುಖ್ಯಮಂತ್ರಿಗಳು 20 ಸಾವಿರ ರೂ. ಸಂಬಳದ ಬಡಪಾಯಿ ಏಜೆಂಟನನ್ನು ಬಲಿಪಶು ಮಾಡಿ ತಾವು ಪಾರಾಗುವ ಸಂಚು ನಡೆಸಿದ್ದಾರೆ. ಸಿಎಂ ಬೊಮ್ಮಾಯಿಯವರು ತಮ್ಮನ್ನು ರಕ್ಷಿಸಿಕೊಳ್ಳಲು ಆಪರೇಷನ್ ವೋಟರ್ ಹಗರಣವನ್ನು ಜಾತಿಗಣತಿಗೆ ಹೋಲಿಸಿದ್ದಾರೆ. ಒಂದು ಸಂಸ್ಥೆಯ ಹಿನ್ನೆಲೆಯನ್ನೂ ಪರಿಶೀಲಿಸದೆ ಮತದಾರರ ಪಟ್ಟಿ ಪರಿಷ್ಕರಣೆಗೆ ನೀಡಿರುವ ಅನುಮತಿಗೂ, ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ನಡೆಸಿರುವ ಜಾತಿಗಣತಿಗೂ ಏನು ಸ್ವಾಮಿ ಸಂಬಂಧ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: "ನನ್ನ ಹೆಸರಿಗೆ ಮಸಿ ಬಳಿಯಲು ಹೊಂಚು ಹಾಕುತ್ತಿರುವವರ ಮೇಲೆ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ"

‘ಉಚಿತವಾಗಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಿರುವ ಚಿಲುಮೆ ಸಂಸ್ಥೆಯ ಹಿನ್ನೆಲೆ ಏನು? ಅದರ ಮಾಲೀಕರು ಯಾರು? ಹಣಕಾಸು ಸಾಮರ್ಥ್ಯ ಏನು? ಉದ್ಯೋಗಿಗಳ ಸಂಖ್ಯೆ ಎಷ್ಟು? ಅದರ ಹಣಕಾಸಿನ ಮೂಲ ಯಾವುದು? ಈ ಬಗ್ಗೆ ತನಿಖೆಯಾಗಲಿ. ದೂರು ಬಂದ ಕಾರಣಕ್ಕೆ ಚಿಲುಮೆಗೆ ನೀಡಿರುವ ಅನುಮತಿಯನ್ನು ಬಿಬಿಎಂಪಿ ರದ್ದುಪಡಿಸಿರುವುದನ್ನು ಸ್ವಾಗತಿಸುತ್ತೇನೆ. ಮಾಡಿರುವ ಅಪರಾಧಕ್ಕೆ ಅನುಮತಿ ರದ್ದತಿ ಶಿಕ್ಷೆ ಅಲ್ಲವಲ್ಲಾ? ಗುತ್ತಿಗೆಯನ್ನು ರದ್ದುಗೊಳಿಸುವ ಮೂಲಕ ಆಗಿರುವ ಅಪರಾಧವನ್ನು ಇಲಾಖೆಯೇ ಒಪ್ಪಿಕೊಂಡಂತಾಗಿಲ್ಲವೇ?’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

‘ಸಮಾಜ ಸೇವೆಗೆ ಬೇಕಾದಷ್ಟು ಅವಕಾಶವಿರುವಾಗ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಉಚಿತವಾಗಿ ಮಾಡುತ್ತೇವೆಂದು ಸಂಸ್ಥೆ ಅರ್ಜಿ ನೀಡಿದಾಗಲೇ ಅದರ ಹಿಂದಿನ ದುರುದ್ದೇಶದ ಅರಿವು ಬಿಬಿಎಂಪಿಗೆ ಆಗಬೇಕಿತ್ತು. ಆಗಿಲ್ಲ ಎಂದರೆ ಬಿಬಿಎಂಪಿ ಹಗರಣದದಲ್ಲಿ ಭಾಗಿಯಾಗಿದೆ ಎಂದು ಅರ್ಥ ಅಲ್ಲವೇ? ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಚಿಲುಮೆ ಸಂಸ್ಥೆಗೆ ನೀಡಿರುವ ಅನುಮತಿಯನ್ನು ರದ್ದುಪಡಿಸಿದ್ದೀರಿ ಸರಿ, ಆದರೆ ಆ ಸಂಸ್ಥೆ ಅಕ್ರಮವಾಗಿ ಸಂಗ್ರಹಿಸಿರುವ ಮಾಹಿತಿ ಏನಾಯಿತು? ಆ ಸಂಸ್ಥೆ ಬಿಬಿಎಂಪಿಗೆ ಸಲ್ಲಿಸಿದೆಯಾ? ಇಲ್ಲವೇ ಯಾವುದಾದರೂ ರಾಜಕೀಯ ಪಕ್ಷಕ್ಕೆ ಮಾರಿದೆಯಾ?’ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಬೊಮ್ಮಾಯಿ ಬಂಧನಕ್ಕೆ ಸಿದ್ದರಾಮಯ್ಯ ಆಗ್ರಹ

‘ಮತದಾರರ ಪಟ್ಟಿ ಪರಿಷ್ಕರಣೆ ಎನ್ನುವುದು ಕೆಜಿಎಫ್ ಚಿತ್ರದ ‘ರಾಕಿಭಾಯ್’ನ ಸೇಡಿನ ಕತೆಯೂ ಅಲ್ಲ, ಕಾಂತಾರ ಚಿತ್ರದ ಗುಳಿಗ-ಪಂಜುರ್ಲಿಯ ದಂತಕತೆಯೂ ಅಲ್ಲ. ಯಾರು ಯಾವ ಕೆಲಸ ಮಾಡಬೇಕೋ, ಅದನ್ನೇ ಮಾಡಬೇಕು’ ಅಂತಾ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News