ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಬಂಡಾಯವೆದ್ದು ರಾಜಿನಾಮೆ ನೀಡಿ ಅನರ್ಹಗೊಂಡ ಶಾಸಕರಲ್ಲಿ ಒಬ್ಬರಾದ ಡಾ.ಕೆ.ಸುಧಾಕರ್ ಅವರು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸಕ್ಕೆ ಭೇಟಿ ನೀಡಿ ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಕೆ.ಸುಧಾಕರ್, ಮುಖ್ಯಮಂತ್ರಿಗಳ ಪ್ರಮಾಣವಚನ ಸಮಾರಂಭದ ದಿನ ನಾನು ಗೈರುಹಾಜರಾಗಿದ್ದರಿಂದ, ನಾನು ಅವರನ್ನು ಅಭಿನಂದಿಸಲು ಸಾಧ್ಯವಾಗಲಿಲ್ಲ. ಇಂದು ಸಿಎಂ ಅವರನ್ನು ಭೇಟಿಯಾಗಿ ಅಭಿನಂದಿಸಿದೆ. ಹಾಗೆಯೇ ನನ್ನ ಕ್ಷೇತ್ರವಾದ ಚಿಕ್ಕಬಳ್ಳಾಪುರದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಾಕಿ ಇರುವ ಮತ್ತು ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡುವಂತೆ ಸಿಎಂ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದೆ. ನನ್ನ ಮನವಿಗೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.
ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗಲಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗುವ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ. ಬಿಜೆಪಿ ಸೇರ್ಪಡೆ ಕುರಿತು ಕ್ಷೇತ್ರದ ಜನರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದರು.
ಇದೇ ವೇಳೆ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ತಮನ್ನು ಅನರ್ಹಗೊಳಿಸಿದ ಬಗ್ಗೆ ಪ್ರತಿಕ್ರಿಯಿಸುತ್ತಾ, ಸಂವಿಧಾನಕ್ಕೆ ವಿರುದ್ಧವಾಗಿ ನಮ್ಮನ್ನು ಅನರ್ಹಗೊಳಿಸಲಾಗಿದೆ. ನಾವು ಕಾನೂನು ಹೋರಾಟ ಮಾಡುತ್ತೇವೆ. ನಮಗೆ ಸುಪ್ರೀಂಕೋರ್ಟಲ್ಲಿ ನ್ಯಾಯ ಸಿಗುತ್ತದೆ ಎಂಬ ವಿಶ್ವಾಸವಿದೆ ಎಂದು ಸುಧಾಕರ್ ಹೇಳಿದರು.