ನವದೆಹಲಿ: ಮುಂದಿನ ವರ್ಷ ಭಾರತೀಯ ಜನತಾ ಪಕ್ಷ ತನ್ನ ನೂತನ ಅಧ್ಯಕ್ಷರನ್ನು ಪಡೆಯಲಿದ್ದು, ಅಮಿತ್ ಶಾ ಅವರ ಸ್ಥಾನಕ್ಕೆ ನೂತನ ಅಧ್ಯಕ್ಷರನ್ನು ನೇಮಿಸುವ ಪ್ರಕ್ರಿಯೆ ಜನವರಿಯೊಳಗೆ ಪೂರ್ಣಗೊಳ್ಳಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಈ ಬಗ್ಗೆ ಮಾಹಿತಿ ನೀಡಿರುವ ಬಿಜೆಪಿ ಹಿರಿಯ ಕಾರ್ಯಕಾರಿಣಿ, "ಮುಂದಿನ ವರ್ಷದ ಜನವರಿಯ ಆರಂಭದಲ್ಲಿ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ. ಶೇ.50ರಷ್ಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಾಂಸ್ಥಿಕ ಚುನಾವಣೆಗಳು ಪೂರ್ಣಗೊಂಡ ಬಳಿಕ ನೂತನ ಅಧ್ಯಕ್ಷರ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಲು ಕನಿಷ್ಠ ಒಂದು ತಿಂಗಳ ಸಮಯ ಬೇಕಾಗುತ್ತದೆ" ಎಂದು ಅವರು ಹೇಳಿದರು.
ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ಬಿಜೆಪಿ ಮುಖಂಡ ರಾಧಾ ಮೋಹನ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಸಾಂಸ್ಥಿಕ ಚುನಾವಣೆಗಳ ವಿಷಯವನ್ನಾಧರಿಸಿ, ಪಕ್ಷದ ಕೇಂದ್ರ ಕಚೇರಿಯಲ್ಲಿ ಇಂದು ಬಿಜೆಪಿ ಚುನಾವಣಾ ಉಸ್ತುವಾರಿ ಮತ್ತು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಹ-ಉಸ್ತುವಾರಿಗಳ ಸಭೆ ಬಳಿಕ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆ ಬಗ್ಗೆ ಮಾಹಿತಿ ದೊರೆತಿದೆ.
ಸಭೆಯಲ್ಲಿ ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಮತ್ತು ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಭಾಗವಹಿಸಿದ್ದರು. ಚುನಾವಣಾ ಪ್ರಕ್ರಿಯೆಯ ಮೇಲ್ವಿಚಾರಣೆಯಲ್ಲಿ ಸಿಂಗ್‌ಗೆ ಸಹಾಯ ಮಾಡುತ್ತಿರುವ ಮಾಜಿ ಕೇಂದ್ರ ಸಚಿವ ಹನ್ಸರಾಜ್ ಅಹಿರ್, ಲೋಕಸಭಾ ಸಂಸದ ವಿನೋದ್ ಸೋಂಕರ್ ಮತ್ತು ಕರ್ನಾಟಕ ಶಾಸಕ ಸಿ.ಟಿ.ರವಿ ಉಪಸ್ಥಿತರಿದ್ದರು.