ಭೂಪಾಲ್: ಮಧ್ಯಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಾರ್ಡಾ, ಹೋಶಂಗಾಬಾದ್, ರೈಸನ್, ರಾಜ್ಗರ್ ಮತ್ತು ಶೆಹೋರ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ವಿದಿಶಾ, ಟಿಕಮ್ಗರ್, ಖಾಂಡ್ವಾ, ಸಾಗರ್, ಅಲಿರಾಜ್ಪುರ, ಧಾರ್, ಅಶೋಕ್ ನಗರ, ದಿವಾಸ್, ಶಾಜಾಪುರ, ನರಸಿಂಗ್ಪುರ ಮತ್ತು ಬುರ್ಹಾನ್ಪುರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ.
ಮಂಗಳವಾರ ಬೆಳಿಗ್ಗೆಯಿಂದ ಮಧ್ಯಪ್ರದೇಶದ ರಾಜಧಾನಿ ಭೋಪಾಲ್ನಲ್ಲಿ ಭಾರಿ ಮಳೆಯಾಗುತ್ತಿದ್ದು, ಭೋಪಾಲ್ನಲ್ಲಿ ಈ ಎಲ್ಲಾ ಮಳೆ ದಾಖಲೆಗಳನ್ನೂ ಮೀರಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಭೋಪಾಲ್ ಇದುವರೆಗೆ ಒಟ್ಟು 168 ಸೆಂ.ಮೀ ಮಳೆಯಾಗಿದ್ದು, ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ 45,000 ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ಏತನ್ಮಧ್ಯೆ, ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ಭರದಿಂದ ಸಾಗುತ್ತಿವೆ ಎಂದು ರಾಜ್ಯ ಸರ್ಕಾರ ತಿಳಿಸಿದ್ದು, ಹೆಚ್ಚಿನ ಎಚ್ಚರಿಕೆ ವಹಿಸುವಂತೆ ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಮುಖ್ಯ ಕಾರ್ಯದರ್ಶಿ ಸುಧಿ ರಣನ್ ಮೊಹಂತಿ, ರಾಜ್ಯದಲ್ಲಿ ಮಳೆಯಿಂದಾಗಿ ಸುಮಾರು 10,000 ಕೋಟಿ ರೂ. ಮೌಲ್ಯದ ಆಸ್ತಿಪಾಸ್ತಿಗೆ ಹಾನಿಯಾಗಿದೆ. ರಾಜ್ಯದ ಹಲವಾರು ಭಾಗಗಳಲ್ಲಿ ಪ್ರವಾಹದಿಂದಾಗಿ ಸುಮಾರು 75000 ಹೆಕ್ಟೇರ್ ಭೂಮಿಯಲ್ಲಿ ಬೆಳೆಯಲಾಗಿದ್ದ ಬೆಳೆಗಳು ಸಂಪೂರ್ಣವಾಗಿ ನಾಶವಾಗಿವೆ ಎಂದು ಹೇಳಿದ್ದಾರೆ.