ಬೆಂಗಳೂರು: ಹಾಡಹಗಲೇ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ಚಾಕುವಿನಿಂದ ಇರಿದ ಘಟನೆ ಕಂಡರೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬುದು ತಿಳಿಯುತ್ತದೆ. ಹಾಗಾಗಿ ಈ ಕೂಡಲೇ ರಾಷ್ಟ್ರಪತಿ ಆಡಳಿತ ಜಾರಿಗೆ ಬರಬೇಕು ಎಂದು ಜೆಡಿಎಸ್ ಮುಖ್ಯಸ್ಥ ಹೆಚ್.ಡಿ.ದೇವೇಗೌಡ ಆಗ್ರಹಿಸಿದ್ದಾರೆ.
ಜೆಡಿಎಸ್ ಸಂಸದೀಯ ಸಮಿತಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಇಂತಹ ಘಟನೆ ನಡೆದಿರುವುದು ಇದೇ ಮೊದಲಲ್ಲ. ಕಳೆದ 6 ತಿಂಗಳಿಂದ ರಾಜ್ಯದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ. ಅಕ್ರಮ ಎಸಗುವವರಿಗೆ ನಿಯಂತ್ರಣ ಇಲ್ಲದಂತಾಗಿದೆ. ಹೀಗಾಗಿ ನೈತಿಕ ಹೊಣೆ ಹೊತ್ತು ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಸೂಕ್ತ ಎಂದು ಅವರು ಹೇಳಿದ್ದಾರೆ.
ಬೆಂಗಳೂರಿನ lokayukta ಕಚೇರಿಯಲ್ಲಿ ಮಾ.7 ರಂದು ಮಧ್ಯಾಹ್ನ ತೇಜ್ ರಾಜ್ ಶರ್ಮಾ ಎಂಬ ವ್ಯಕ್ತಿ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರನ್ನು ಮೂರು ಬಾರಿ ಚಾಕುವಿನಿಂದ ಇರಿದು ಗಾಯಗೊಳಿಸಿದ್ದ. ಪ್ರಸ್ತುತ ನ್ಯಾಯಮೂರ್ತಿ ವಿಶ್ವನಾಥ್ ಅವರ ಪರಿಸ್ಥಿತಿ ಗಂಭೀರವಾಗಿದ್ದು, ಮಲ್ಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ತೇಜ್ ರಾಜ್ ಶರ್ಮಾ ನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.