ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ.
ಮಂಡ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಲಿದ್ದು, ಮಂಡ್ಯದಿಂದ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದ್ದು, ಮಂಡ್ಯದಿಂದ ಒಕ್ಕಲಿಗ ಅಭ್ಯರ್ಥಿ ಆರ್. ಅಶೋಕ್ ಕಣಕ್ಕಿಳಿಯುವುದು ಸೂಕ್ತ ಎಂದು ಬಿ.ಎಸ್. ಯಡಿಯೂರಪ್ಪ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಅಹಮದಾಬಾದ್ ನಲ್ಲಿ ಸೋಮವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರನ್ನು ಭೇಟಿಯಾಗಿದ್ದ ಯಡಿಯೂರಪ್ಪ ಆರ್. ಅಶೋಕ್ ರನ್ನು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಮಂಡ್ಯ ಸಂಸದರಾಗಿದ್ದ ಜೆಡಿಎಸ್ ನ ಪುಟ್ಟರಾಜು ರಾಜೀನಾಮೆ ನೀಡಿರುವ ಹಿನ್ನಲೆಯಲ್ಲಿ ಮಂಡ್ಯ ಕ್ಷೇತ್ರ ತೆರವಾಗಿದೆ.