ಬೆಂಗಳೂರು: ಕೊಡಗು ಸೇರಿದಂತೆ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿ ಬಗ್ಗೆ ಸಮೀಕ್ಷೆ ನಡೆಸಲು ಕೇಂದ್ರ ಸರ್ಕಾರದ ಅಧಿಕಾರಿಗಳನ್ನೊಳಗೊಂಡ ಉನ್ನತ ಮಟ್ಟದ ಅಧಿಕಾರಿಗಳ ತಂಡ ಮಂಗಳವಾರ ರಾಜ್ಯಕ್ಕೆ ಆಗಮಿಸಲಿದೆ.
ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಅನಿಲ್ ಮಲ್ಲಿಕ್ ನೇತೃತ್ವದಲ್ಲಿ 6 ಸದಸ್ಯರ ತಂಡವು ಮಂಗಳವಾರ ಬೆಂಗಳೂರಿಗೆ ಆಗಮಿಸುತ್ತಿದ್ದು, ವಿಪರೀತ ಮಳೆಯಿಂದ ತತ್ತರಿಸಿರುವ ಕೊಡಗು, ದಕ್ಷಿಣ ಕನ್ನಡ, ಉಡುಪಿ ಮತ್ತು ಹಾಸನ ಜಿಲ್ಲೆಗಳಿಗೆ ಸೆ. 12 ಮತ್ತು 13ರಂದು ಭೇಟಿ ನೀಡಲಿದೆ.
ಈ ತಂಡದ ಮೂವರು ಸದಸ್ಯರು ಕೊಡಗಿಗೆ ಭೇಟಿ ನೀಡಲಿದ್ದು, ಉಳಿದ ಮೂವರು ಸದಸ್ಯರು ದಕ್ಷಿಣ ಕನ್ನಡ, ಹಾಸನ ಮತ್ತು ಉಡುಪಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ತಂಡವು ಎಲ್ಲಾ ಜಿಲ್ಲೆಗಳಲ್ಲೂ ನೆರೆಪೀಡಿತ ಪ್ರದೇಶಗಳಿಗೆ ತೆರಳಿ, ಅತಿವೃಷ್ಟಿಯಿಂದ ಆಗಿರುವ ಹಾನಿಯನ್ನು ಅವಲೋಕಿಸಲಿದ್ದಾರೆ.
ದೆಹಲಿಯಲ್ಲಿ ಸೋಮವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ನಿಯೋಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಅತಿವೃಷ್ಟಿ ಹಾಗೂ ಒಳನಾಡಿನಲ್ಲಿ ಬರ ಪರಿಸ್ಥಿತಿ ತಲೆದೋರಿರುವ ಬಗ್ಗೆ ವಿವರಿಸಿದೆ. ಜತೆಗೆ ಕೊಡಗು ಸೇರಿದಂತೆ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪುನರ್ವಸತಿ ಹಾಗೂ ಪರಿಹಾರ ಕಾರ್ಯಗಳಿಗೆ 2000 ಕೋಟಿ ರೂ. ಪ್ಯಾಕೇಜ್ ಘೋಷಿಸಿ ಅನುದಾನ ಬಿಡುಗಡೆ ಮಾಡುವಂತೆ ಮಾಡಿತ್ತು.
ಆ ಸಂದರ್ಭದಲ್ಲಿ ಕೊಡಗು ಮತ್ತು ನೆರೆಯ ಮಲೆನಾಡು ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಸಂಭವಿಸಿದ ಹಾನಿಯನ್ನು ಸಮೀಕ್ಷೆ ಮಾಡಲು ಕೂಡಲೇ ಕೇಂದ್ರ ಸರ್ಕಾರವು ಅಧಿಕಾರಿಗಳ ಎರಡು ತಂಡಗಳನ್ನು ಕಳುಹಿಸುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ನೇತೃತ್ವದ ನಿಯೋಗಕ್ಕೆ ಭರವಸೆ ನೀಡಿದ್ದರು.