ರಾಜ್ಯದ ಜನರಿಗೆ ಮತ್ತೊಂದು ಶಾಕ್..! ಸದ್ಯದಲ್ಲೇ ಏರಿಕೆ ಆಗಲಿದೆ ಬಸ್ ಟಿಕೆಟ್ ದರ
ರಾಜ್ಯ ಸಕಾರದ ಅಧೀನದಲ್ಲಿ ನಡೆಯುವ ಈ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಯಾವತ್ತೂ ಲಾಭದಲ್ಲಿ ನಡೆದಿಲ್ಲ. ಈಗ ಇವುಗಳಿಂದ ತುಂಬಾ ನಷ್ಟ ಆಗುತ್ತಿರುವುದರಿಂದ ಬಸ್ ಟಿಕೆಟ್ ದರ ಏರಿಕೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
ಈಗಾಗಲೇ ಕೆಎಸ್‌ಆರ್‌ಟಿಸಿ ಹಾಗು ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದ್ದು ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ಸಂಡೂರು, ಶಿಗ್ಗಾಂವಿ ಮತ್ತು ಚನ್ನಪಟ್ಟಣ ಉಪ ಚುನಾವಣೆ ಮುಗಿದ ಮೇಲೆ ಬಸ್ ಪ್ರಯಾಣ ದರ ಏರಿಕೆಯನ್ನು ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗಳು ಬಸ್ ಪ್ರಯಾಣ ದರವನ್ನು ಶೇಕಡ 15 ರಿಂದ 20ರಷ್ಟು ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಪ್ರಸ್ತಾವನೆಯನ್ನು ಪರಿಶೀಲಿಸಿರುವ ರಾಜ್ಯ ಸರ್ಕಾರ ಬೆಲೆ ಏರಿಸಲು ಒಪ್ಪಿಕೊಂಡಿದೆ ಎಂದು ತಿಳಿದುಬಂದಿದೆ.
ಡೀಸೆಲ್ ಮತ್ತು ಬಸ್ ಬಿಡಿಭಾಗಗಳ ದರದಲ್ಲಿ ಹೆಚ್ಚಳವಾಗಿರುವುದರಿಂದ ಅನಿವಾರ್ಯವಾಗಿ ಪ್ರಯಾಣ ದರವನ್ನು ಹೆಚ್ಚು ಮಾಡಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗಳು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿವೆ. ಜೊತೆಗೆ ಕಳೆದ ನಾಲ್ಕು ವರ್ಷದಿಂದ ಕೆಎಸ್‌ಆರ್‌ಟಿಸಿ ಟಿಕೆಟ್ ದರದ ಪರಿಷ್ಕರಣೆಯನ್ನು ಕೂಡ ಮಾಡಿಲ್ಲ. 2013ರಿಂದ ಬಿಎಂಟಿಸಿ ಬಸ್ ಪ್ರಯಾಣ ದರದಲ್ಲೂ ಯಾವುದೇ ಏರಿಕೆ ಆಗಿಲ್ಲ. ಇದಲ್ಲದೆ ಇತರೆ ಸಾರಿಗೆ ನಿಗಮಗಳಾದ ಕಲ್ಯಾಣ ಕರ್ನಾಟಕ ಹಾಗೂ ವಾಯುವ್ಯ ಕರ್ನಾಟಕ ಸಾರಿಗೆ ನಿಗಮಗಳು ಕೂಡ ನಾಲ್ಕು ವರ್ಷದಿಂದ ತಮ್ಮ ಬಸ್ ಪ್ರಯಾಣ ದರವನ್ನು ಪರಿಷ್ಕರಣೆ ಮಾಡಿಲ್ಲ. ಆದುದರಿಂದ ಈಗ ಪ್ರಯಾಣ ದರ ಏರಿಕೆ ಅನಿವಾರ್ಯ ಎನ್ನುವದನ್ನು ರಾಜ್ಯಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟಿವೆ ಎಂದು ತಿಳಿದುಬಂದಿದೆ.
ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ ಮತ್ತು ವಾಯುವ್ಯ ಕರ್ನಾಟಕ ಸಾರಿಗೆ ನಿಗಮಗಳು ಹಿಂದೆಯೂ ಹಲವು ಬಾರಿ ಬಸ್ ದರ ಏರಿಸುವಂತೆ ಮನವಿ ಮಾಡಿದ್ದವು. ಆದರೆ ಪ್ರಯಾಣಿಕರಿಗೆ ಹೊರೆಯಾಗುತ್ತದೆ ಎಂಬ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರಯಾಣ ದರ ಏರಿಕೆ ಪ್ರಸ್ತಾವನೆಯನ್ನು ತಿರಸ್ಕರಿಸಿತ್ತು. ಆದರೀಗ ಡೀಸೆಲ್ ಮತ್ತು ಬಸ್ ಬಿಡಿಭಾಗಗಳ ದರದಲ್ಲಿ ಬಹಳ ಹೆಚ್ಚಳವಾಗಿರುವುದರಿಂದ ಅನಿವಾರ್ಯವಾಗಿ ಪ್ರಯಾಣ ದರವನ್ನು ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂಬುದಾಗಿ ತಿಳಿದುಬಂದಿದೆ.