ಸ್ವಾಮಿ ವಿವೇಕಾನಂದರು 1862ರಲ್ಲಿ 12ನೇ ಜನವರಿ ಮಕರಸಂಕ್ರಾಂತಿಯ ಶುಭದಿನದಂದು ಕಲ್ಕತ್ತದಲ್ಲಿ ಜನಿಸಿದರು. ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ವಜ್ಞಾನಿಗಳಲ್ಲಿ ಒಬ್ಬರಾದ ಅವರು ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಪರಿಗಣಿತರಾಗಿದ್ದಾರೆ.
ದೇಶವನ್ನು ಮುನ್ನಡೆಸಲು ಸಶಕ್ತವಾದ ಯುವಪಡೆಯನ್ನು ನಿರ್ಮಿಸುವುದೇ ನನ್ನ ಗುರಿ ಎನ್ನುತ್ತಿದ್ದವರು ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರು. ಯುವಕರಿಗೆ ಮಾನಸಿಕ, ದೈಹಿಕ, ಅಧ್ಯಾತ್ಮಿಕ, ನೈತಿಕ, ಸಾಮಾಜಿಕವಾಗಿ ಎಂದೂ ಶಕ್ತಿ ಕಳೆದುಕೊಳ್ಳಬಾರದು ಎಂದು ಕರೆ ನೀಡಿದ್ದ ಅವರು ಭಾರತೀಯ ಸಂಸ್ಕೃತಿಯ ಉಳಿಸಿ, ಬೆಳಸಲು ಯುವಕರಲ್ಲಿ ನವೋತ್ಸಾಹವನ್ನು ಕೆರಳಿಸಿ, ಅವರಲ್ಲಿ ನಮ್ಮ ಸಂಸ್ಕೃತಿಯ ಬಗ್ಗೆ ಹೆಮ್ಮೆಯನ್ನು ಮೂಡಿಸಿ ಸ್ವತಂತ್ರ ನವ ಭಾರತ ನಿರ್ಮಾಣಕ್ಕೆ ಬುನಾದಿಯನ್ನು ಹಾಕಿದವರು. ಹಾಗಾಗಿ ಅವರ ಜನ್ಮ ದಿನವನ್ನು 'ರಾಷ್ಟ್ರೀಯ ಯುವ ದಿನ'ವಾಗಿ ಆಚರಿಸಲಾಗುತ್ತದೆ.