ಪ್ರಧಾನಿ ಮೋದಿ ಸೇರಿದಂತೆ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ
ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯನವರು ಗುರುವಾರ ಪ್ರಧಾನಿ ಮೋದಿಯವರನ್ನು ಭೇಟಿಯಾದರು. ಈ ವೇಳೆ ಪ್ರಧಾನಿ ಮೋದಿಯವರಿಗೆ ಗಂಧದ ಹಾರ ಹಾಕಿ, ಮೈಸೂರು ಪೇಟ ಧರಿಸಿ, ಅಂಬಾರಿ ಕೊಟ್ಟು ಸಿದ್ದರಾಮಯ್ಯನವರು ಸನ್ಮಾಸಿದರು. 2ನೇ ಸಲ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಪ್ರಧಾನಿಯವರನ್ನು ಭೇಟಿಯಾದರು.
ತಮ್ಮ ಹುಟ್ಟುಹಬ್ಬದ ದಿನವೇ ಪ್ರಧಾನಿ ಮೋದಿಯವರನ್ನು ಭೇಟಿಯಾದ ಸಿದ್ದರಾಮಯ್ಯನವರು, ವಿವಿಧ ಯೋಜನೆಗಳಡಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಅನುದಾನಗಳ ಬಿಡುಗಡೆ ಬಗ್ಗೆ ಮಹತ್ವದ ಚರ್ಚೆ ನಡೆಸಿದರು ಎಂದು ತಿಳಿದುಬಂದಿದೆ.
ಸಿದ್ದರಾಮಯ್ಯನವರು ಗುರವಾರ ಬೆಳಿಗ್ಗೆ ಮೊದಲು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸುವಂತೆ ಮನವಿ ಮಾಡಿಕೊಂಡರು ಎಂದು ತಿಳಿದುಬಂದಿದೆ.
ರಾಜನಾಥ್ ಸಿಂಗ್ ಭೇಟಿ ಬಳಿಕ ಸಿದ್ದರಾಮಯ್ಯನವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿರು. ಈ ವೇಳೆ ರಾಜ್ಯದ ಯೋಜನೆಗಳ ಬಗ್ಗೆ ಅವರು ಮಹತ್ವದ ಸಮಾಲೋಚನೆ ನಡೆಸಿದರು ಎಂದು ತಿಳಿದುಬಂದಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಉಪಸ್ಥಿತರಿದ್ದರು.
ಕೊನೆಯದಾಗಿ ಸಿಎಂ ಸಿದ್ದರಾಮಯ್ಯನವರು ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದರು. ಈ ವೇಳೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಭವಿಸುತ್ತಿರುವ ಅಪಘಾತಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಶಿರಾಡಿ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣ ಕುರಿತು ಮಾತುಕತೆ ನಡೆಸಿದರು. ಸಿಎಂ ಜೊತೆಗೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಹಾಜರಿದ್ದರು.