ಮಾರಮ್ಮನ ದೇವಸ್ಥಾನ ವಿಷಪೂರಿತ ಪ್ರಸಾದ ಸೇವನೆ ದುರಂತ

ಪ್ರಸಾದದಲ್ಲಿ ವಿಷ ಬೆರೆಸಿದ್ದ ಕಾರಣ 11 ಮಂದಿ ಸಾವನ್ನಿಪ್ಪಿದ ಮನಕಲಕುವ ಘಟನೆ ಶುಕ್ರವಾರ ನಡೆದಿದೆ.

  • Dec 15, 2018, 11:48 AM IST

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಕಿಚ್‌ಕುತ್‌ ಮಾರಮ್ಮನ ದೇವಾಲಯದಲ್ಲಿ ವಿತರಿಸಿದ ಪ್ರಸಾದದಲ್ಲಿ ವಿಷ ಬೆರೆಸಿದ್ದ ಕಾರಣ 11 ಮಂದಿ ಸಾವನ್ನಿಪ್ಪಿದ ಮನಕಲಕುವ ಘಟನೆ ಶುಕ್ರವಾರ ನಡೆದಿದೆ. ಘಟನೆಯಲ್ಲಿ ಸಾವನ್ನಪ್ಪಿಡವರ ಕುಟುಂಬಕ್ಕೆ ಸರ್ಕಾರ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. 

1 /6

ಶುಕ್ರವಾರ ಸುಳುವಾಡಿ ಗ್ರಾಮದ ಕಿಚ್‌ ಕುತ್‌ ಮಾರಮ್ಮ ದೇವಸ್ಥಾನದಲ್ಲಿ ಗೋಪುರ ನಿರ್ಮಾಣ ಹಾಗೂ ಸುತ್ತುಗೋಡೆ ನಿರ್ಮಾಣಕ್ಕೆ ಭೂಮಿಪೂಜೆ ಏರ್ಪಡಿಸಲಾಗಿತ್ತು. ಪೂಜೆಯ ಬಳಿಕ ಅನ್ನಸಂತರ್ಪಣೆಗಾಗಿ ಟೊಮ್ಯಾಟೋ ಬಾತ್‌ ಮತ್ತು ಪಂಚಾಮೃತ ತಯಾರಿಸಲಾಗಿತ್ತು. ಈ ಸಂದರ್ಭದಲ್ಲಿ ಸೇರಿದ್ದ 90ಕ್ಕೂ ಹೆಚ್ಚು ಜನ ಪ್ರಸಾದ ಸೇವಿಸಿದ್ದರು. ಬಳಿಕ ಹಲವು ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದರು. ಹೀಗಾಗಿ ಪ್ರಸಾದದಲ್ಲಿ ವಿಷ ಬೆರೆಸಿರುವ ಶಂಕೆ ವ್ಯಕ್ತವಾಗಿತ್ತು.

2 /6

ಸುಳುವಾಡಿಯ ಕಿಚ್‌ಕುತ್‌ ಮಾರಮ್ಮ ದೇವಸ್ಥಾನ ಚಿಕ್ಕದಾಗಿದ್ದು, ನೂತನ ಗೋಪುರ ಹಾಗೂ ಸುತ್ತುಗೋಡೆ ನಿರ್ಮಾಣ ವಿಚಾರದಲ್ಲಿ ಗ್ರಾಮದ ಎರಡು ಗುಂಪುಗಳ ನಡುವೆಯೇ ವೈಮನಸ್ಸಿತ್ತು ಎನ್ನಲಾಗಿದೆ. ಈ ವೈಷಮ್ಯವೇ ಆಹಾರದಲ್ಲಿ ವಿಷ ಬೆರೆಸಲು ಕಾರಣವಾಗಿದೆಯೇ ಎಂಬ ಸಂದೇಹ ಮೂಡಿದೆ. 

3 /6

ಪ್ರಸಾದ ಸೇವಿಸಿ ಅಸ್ವಸ್ಥಗೊಂಡ 90ಕ್ಕೂ ಹೆಚ್ಚು ಮಂದಿ ಮೈಸೂರು, ಚಾಮರಾಜನಗರ, ಕೊಳ್ಳೇಗಾಲದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಆರ್​​ ಆಸ್ಪತ್ರೆಯಲ್ಲಿ ಅಸ್ವಸ್ಥಗೊಂಡ 45ಕ್ಕೂ ಹೆಚ್ಚು ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಅಸ್ವಸ್ಥರಾದವರನ್ನು ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗುತ್ತಿದೆ. 

4 /6

ಮೈಸೂರಿನ ಕೆಆರ್ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಸ್ವಸ್ಥರಾದವರು ಹಾಗೂ ಅವರ ಕುಟುಂಬದವರಿಗೆ ಧೈರ್ಯ ತುಂಬಿದರು. 

5 /6

ಅಸ್ವಸ್ಥಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವಂತೆ ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾಧಿಕಾರಿ ಗಳಿಗೆ ಸಿಎಂ ಸೂಚನೆ ನೀಡಿದ್ದಾರಲ್ಲದೆ, ಘಟನೆಯ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದಾರೆ.

6 /6

ಅಲ್ಲದೆ, ಅಸ್ವಸ್ಥರಿಗೆ ನೀಡುತ್ತಿರುವ ಚಿಕಿತ್ಸೆಯ ಬಗ್ಗೆ ಆಸ್ಪತ್ರೆಯ ಸಿಬ್ಬಂದಿಗಳೊಂದಿಗೆ ಚರ್ಚಿಸಿದರು. ಇದೇ ವೇಳೆ ಮೃತರ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.