PM Modi In Bengaluru: ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಆತ್ಮೀಯ ಸ್ವಾಗತ
ಬಿ.ಮಾರೇನಹಳ್ಳಿಯಲ್ಲಿರುವ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸೆಂಟರ್‍ನ ಉದ್ಘಾಟನೆ ಇಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿಯವರನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಆತ್ಮೀಯವಾಗಿ ಸ್ವಾಗತಿಸಿದರು.
ಪ್ರಧಾನಿ ಮೋದಿಯವರನ್ನು ಸ್ವಾಗತಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬರಬೇಕಿತ್ತು. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಹೂಗುಚ್ಛ ನೀಡುವ ಮೂಲಕ ಪ್ರಧಾನಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.
ಈ ವೇಳೆ ಸಚಿವ ಕೆ.ಜೆ.ಜಾರ್ಜ್, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ.ರಜನೀಶ್ ಗೋಯಲ್, ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್, ಬೆಂಗಳೂರು ಪೊಲೀಸ್ ಆಯುಕ್ತರಾದ ಬಿ.ದಯಾನಂದ, ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ, ಸಂಸದರಾದ ತೇಜಸ್ವಿ ಸೂರ್ಯ, ಪಿ.ಸಿ.ಮೋಹನ್ ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ.ವಿಜಯೇಂದ್ರ , ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು ಸಹ ಈ ವೇಳೆ ಹಾಜರಿದ್ದರು ಪ್ರಧಾನಿ ಮೋದಿಯವರಿಗೆ ಸ್ವಾಗತ ಕೋರಿದರು.
ಬಳಿಕ ಪ್ರಧಾನಿ ಮೋದಿಯವರು 43 ಎಕರೆ ಕ್ಯಾಂಪಸ್‌ನಲ್ಲಿ 1,600 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಹೊಸ ಅತ್ಯಾಧುನಿಕ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ (ಬಿಐಇಟಿಸಿ)ವನ್ನು ಉದ್ಘಾಟಿಸಿದರು. ಇದೇ ವೇಳೆ ಬೋಯಿಂಗ್ ಸುಕನ್ಯಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ, ವಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.