ಡಿ. 7ರವರೆಗೆ ಈ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆ: ಬಿರುಗಾಳಿ ಜೊತೆ ಜಲಪ್ರಳಯದ ಮುನ್ಸೂಚನೆ
ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾದ ಚಂಡಮಾರುತದ ಪರಿಚಲನೆಯಿಂದಾಗಿ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ವರುಣಾರ್ಭಟ ಮುಂದುವರೆದಿದೆ. ಜೊತೆಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಡಿಸೆಂಬರ್ 3 ಮತ್ತು 4 ರಂದು ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್’ನಲ್ಲಿ (115.6 ರಿಂದ 204.4 ಮಿಮೀ) ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಕಡಿಮೆ ಒತ್ತಡದ ಪ್ರದೇಶ ಕ್ರಮೇಣ ವಾಯುವ್ಯ ಕಡೆಗೆ ಚಲಿಸಲಿದೆ. ಇದು ಸೈಕ್ಲೋನಿಕ್ ಚಂಡಮಾರುತದ ರೂಪವನ್ನು ತೆಗೆದುಕೊಳ್ಳುತ್ತದೆ. ತಮಿಳುನಾಡು, ಕೇರಳ ಮತ್ತು ಕರಾವಳಿ ಭಾಗದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಐಎಂಡಿ ಸೂಚಿಸಿದೆ.
ಭಾರೀ ಮಳೆಯ ಮುನ್ಸೂಚನೆಯನ್ನು ಗಮನದಲ್ಲಿಟ್ಟುಕೊಂಡು, ಚೆನ್ನೈ ಮುನ್ಸಿಪಲ್ ಕಾರ್ಪೊರೇಷನ್ ಜನರಿಗೆ ಸಹಾಯ ಮಾಡಲು ಸಹಾಯವಾಣಿ ಸಂಖ್ಯೆಯನ್ನು ಪ್ರಾರಂಭಿಸಿದೆ. ಜೊತೆಗೆ ಚಂಡಮಾರುತದ ಎಚ್ಚರಿಕೆಯ ದೃಷ್ಟಿಯಿಂದ, ಐದು NDRF ತಂಡಗಳನ್ನು ಚೆನ್ನೈ, ಚೆಂಗಲ್ಪೇಟ್ ಮತ್ತು ವಿಲ್ಲುಪುರಂ ಜಿಲ್ಲೆಗಳಲ್ಲಿ ನಿಯೋಜಿಸಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಪರಿಣಾಮ ಎದುರಿಸುವಂತಾಗಿದೆ. ಅಂದಹಾಗೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 5ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗುತ್ತಿದೆ.
ಇನ್ನು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭರ್ಜರಿ ವರ್ಷಧಾರೆಯಾಗಲಿದೆ. ಇನ್ನುಳಿದಂತೆ ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಕಲಬುರಗಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.