ಕಾವೇರಿ, ಮೇಕೆದಾಟು ಮತ್ತು ಮಹದಾಯಿ ಜಲ ವಿವಾದಗಳ ಕುರಿತಂತೆ ಮುಖ್ಯಮಂತ್ರಿ Siddaramaiah ಅವರ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಸಭೆ ನಡೆಯಿತು.ಸಭೆಯಲ್ಲಿ ಜಲ ಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ, ಜಗದೀಶ ಶೆಟ್ಟರ್, ಡಿ.ವಿ. ಸದಾನಂದಗೌಡ, ವೀರಪ್ಪ ಮೊಯಿಲಿ, ಸಚಿವರಾದ ಹೆಚ್.ಕೆ. ಪಾಟೀಲ, ಚೆಲುವರಾಯಸ್ವಾಮಿ, ಡಾ. ಜಿ. ಪರಮೇಶ್ವರ, ಕೆ.ಜೆ. ಜಾರ್ಜ್, ಕೃಷ್ಣ ಬೈರೇಗೌಡ, ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಎಲ್ಲ ಪಕ್ಷಗಳ ಶಾಸಕರು ಸಂಸದರು, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹಿರಿಯ ವಕೀಲರಾದ ಮೋಹನ್ ಕಾತರಕಿ ಮತ್ತು ಇತರ ಕಾನೂನು ತಜ್ಞರು, ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮೇಕೆದಾಟು, ಕಾವೇರಿ, ಮಹದಾಯಿ, ಕೃಷ್ಣಾ ಸಮಸ್ಯೆಗಳ ಕುರಿತು ಸರ್ವಪಕ್ಷ ನಿಯೋಗದ ಮೂಲಕ ತೆರಳಿ ಪ್ರಧಾನಿಯವರನ್ನು ಭೇಟಿ ಮಾಡೋಣ. ಇದಕ್ಕೆ ಎಲ್ಲ ಪಕ್ಷಗಳು ನಮಗೆ ಸಹಕಾರ ನೀಡಲಿವೆ ಎಂದು ಭಾವಿಸಿದ್ದೇನೆ.ರಾಜ್ಯದ ಹಿತ ಕಾಪಾಡಲು ನಾವು ಎಂದಿಗೂ ಬದ್ಧರಾಗಿರುತ್ತೇವೆ. ಐದಾರು ವರ್ಷಗಳಿಗೊಮ್ಮೆ ಮಳೆಯ ಕೊರತೆಯಿಂದಾಗಿ ತಮಿಳು ನಾಡಿಗೆ ಕಾವೇರಿ ನೀರು ಬಿಡಲು ಸಂಕಷ್ಟ ಎದುರಾಗುತ್ತದೆ. ಈ ಕುರಿತು ಸಂಕಷ್ಟ ಹಂಚಿಕೆ ಸೂತ್ರ ನಿರ್ದಿಷ್ಟ ಪಡಿಸಿಲ್ಲ. ಈ ಬಗ್ಗೆ ಸುಪ್ರೀಂ ಕೋರ್ಟಿನಲ್ಲಿ ವಕೀಲರು ಸಮರ್ಥವಾಗಿ ವಾದ ಮಂಡಿಸಬೇಕು. ಇದಕ್ಕೆ ನಮ್ಮ ಸರ್ಕಾರ ಎಲ್ಲ ಅಗತ್ಯ ಬೆಂಬಲ ನೀಡಲಿದೆ.
ಕರ್ನಾಟಕದ ನೆಲ, ಜಲ, ಗಡಿ, ಭಾಷೆಗಳ ಬಗ್ಗೆ ಮೊದಲಿನಿಂದಲೂ ಎಲ್ಲ ರಾಜಕೀಯ ಪಕ್ಷಗಳೂ ಒಕ್ಕೊರಲಿನಿಂದ ಮಾತನಾಡಿವೆ. ಈ ವಿಷಯಗಳಲ್ಲಿ ರಾಜಕೀಯ ಮಾಡುವ ಪ್ರಯತ್ನವನ್ನು ಯಾರೂ ಮಾಡಿಲ್ಲ, ಮಾಡಲೂಬಾರದು. ಯಾಕೆಂದರೆ ನಾವೆಲ್ಲರೂ ರಾಜ್ಯದ ಏಳು ಕೋಟಿ ಜನರ ಹಿತ ಕಾಪಾಡಬೇಕಾಗಿದೆ.
ನಾವು ವಾದ ಮಾಡಿದ್ದರಿಂದಲೇ 15,000 ಕ್ಯೂಸೆಕ್ ನೀರಿನಿಂದ 10,000 ಕ್ಯೂಸೆಕ್ ನೀರಿಗೆ ಇಳಿಕೆ ಮಾಡಲಾಯಿತು. ಅದನ್ನೂ ಮರು ಪರಿಶೀಲನೆ ಮಾಡುವಂತೆ ಅರ್ಜಿ ಸಲ್ಲಿಸಿದೆವು. 15,000 ಕ್ಯೂಸೆಕ್ ನೀರು ಕೊಡಲಾಗದು ಎಂದು ರಾಜ್ಯದ ಅಧಿಕಾರಿಗಳು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ವಾದ ಮಂಡಿಸುತ್ತಿರುವಾಗಲೇ ತಮಿಳುನಾಡಿದ ಅಧಿಕಾರಿಗಳು ಸಭಾತ್ಯಾಗ ಮಾಡಿದರು. ನಂತರ ಸುಪ್ರೀಂ ಕೋರ್ಟಿನಲ್ಲಿ ಮನವಿ ಸಲ್ಲಿಸಿದ್ದಾರೆ. 25ರಂದು ಈ ಪ್ರಕರಣ ವಿಚಾರಣೆಗೆ ಬರಲಿದ್ದು, ಈ ವಿಷಯದಲ್ಲಿ ವಕೀಲರು ಸಮರ್ಥವಾಗಿ ವಾದ ಮಾಡುತ್ತಾರೆಂಬ ವಿಶ್ವಾಸವಿದೆ.
ಕಾವೇರಿ ನಿಯಂತ್ರಣ ಸಮಿತಿ ಮತ್ತು ಪ್ರಾಧಿಕಾರದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಅಧಿಕಾರಿಗಳು ಸಂಕಷ್ಟದ ಬಗ್ಗೆ ಪ್ರತಿಪಾದನೆ ಮಾಡಿದ್ದಾರೆ. ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಈ ವರ್ಷ ಮಳೆ ಕಡಿಮೆ ಆಯಿತು. ಜೂನ್ ಹಾಗೂ ಆಗಸ್ಟ್ ನಲ್ಲಿ ಮಳೆ ಕೊರತೆಯಾಗಿದೆ. ಇಲ್ಲಿಯ ವರೆಗೆ ನೀರು ಬಿಡಬೇಕಾಗಿದ್ದಿದ್ದು 86.38 ಟಿಎಂಸಿ. ಆದರೆ 20 ನೇ ತಾರೀಖಿನ ವರೆಗೆ ನೀರು ಬಿಟ್ಟಿರುವುದು 24 ಟಿಎಂಸಿ. ಅಂದರೆ ನಾವು ವಿರೋಧ ಮಾಡಿದ್ದೇವೆ. ವಾಸ್ತವವನ್ನು ಪ್ರಾಧಿಕಾರದ ಮುಂದೆ ಬಿಡಿಸಿಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಮಳೆ ಕೊರತೆಯಿಂದಾಗಿ ಬೆಳೆಗಳಿಗೆ ನೀರು ಬಿಟ್ಟಿಲ್ಲ. ಕುಡಿಯುವ ನೀರಿಗೆ ನೀರು ಬೇಕಾಗುತ್ತದೆ ಎಂದು ವಿವರಿಸಲಾಗಿದೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ಸಂಕಷ್ಟ ಹಂಚಿಕೆ ಸೂತ್ರದ ಕುರಿತು ತೀರ್ಮಾನ ಆಗಲೇಬೇಕು. ಇಂತಹ ಸಂಕಷ್ಟದ ಸಮಯದಲ್ಲಿ 67 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯದ ಮೇಕೆದಾಟು ಸಮತೋಲನಾ ಜಲಾಶಯ ನಿರ್ಮಿಸಿದರೆ, ಅವರಿಗೆ ನೀರು ಬಿಡಲು ಅನುಕೂಲವಾಗುತ್ತದೆ. ಈ ಯೋಜನೆಗೆ ತಮಿಳುನಾಡು ವಿನಾಕಾರಣ ವಿರೋಧಿಸುತ್ತಿದೆ. ಕಾವೇರಿ ವಿವಾದ ಬಹಳಾ ಹಳೆಯದು. ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ನಂತರ 2018 ರಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಾಗಿದೆ. ಕಾವೇರಿ ನೀರು ನಿಯಂತ್ರಣಾ ಸಮಿತಿ ಸ್ಥಾಪನೆಯಾಗಿದೆ. ಕಾವೇರಿ ಪ್ರಾಧಿಕಾರವು 22 ಸಭೆ ಹಾಗೂ ನಿಯಂತ್ರಣ ಸಮಿತಿಯು 84 ಸಭೆ ನಡೆಸಿದೆ. ಈ ಸಮಿತಿಗಳಾದ ಮೇಲೆ, ರಾಜ್ಯದಲ್ಲಿ ಸಂಕಷ್ಟದ ದಿನಗಳು ಎದುರಾಗಿದೆ. ಆಗ ನಾವು ನಿಯಂತ್ರಣ ಸಮಿತಿ, ಪ್ರಾಧಿಕಾರದಲ್ಲಿ ಚರ್ಚಿಸಿ, ಅದರ ತೀರ್ಮಾನದಂತೆ ನಡೆದುಕೊಂಡ ಅನೇಕ ನಿದರ್ಶನಗಳಿವೆ.