ಇಸ್ಲಾಮಾಬಾದ್: ಪಂಜಾಬ್ ಪ್ರಾಂತ್ಯದ ನಂಕಾನಾ ಸಾಹಿಬ್ ಜಿಲ್ಲೆಯ ಆಸ್ಪತ್ರೆಯೊಂದರೊಳಗೆ ಸೋಮವಾರ ರಾತ್ರಿ ಎರಡು ಗುಂಪುಗಳ ನಡುವೆ ನಡೆದ ಸಶಸ್ತ್ರ ಘರ್ಷಣೆಯಲ್ಲಿ ಐವರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. 


COMMERCIAL BREAK
SCROLL TO CONTINUE READING

ಈ ಬಗ್ಗೆ ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿರುವುದಾಗಿ ಎಎನ್ಐ ತಿಳಿಸಿದ್ದು, ಜಿಲ್ಲಾ ಆಸ್ಪತ್ರೆಯ ತುರ್ತು ವಾರ್ಡ್‌ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.


ಸೋಮವಾರ ಜಿಲ್ಲೆಯಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಎರಡು ಗುಂಪುಗಳ ನಡುವಿನ ಘರ್ಷಣೆಯಲ್ಲಿ ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಲಾಹೋರ್ ಮತ್ತು ಫೈಸಲಾಬಾದ್ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಅವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ದುನ್ಯಾ ನ್ಯೂಸ್ ವರದಿ ಮಾಡಿದೆ. 


ಮೃತರನ್ನು ಚೌಧರಿ ತನ್ವೀರ್, ಅಬ್ದುಲ್ ವಾಹಿದ್, ಅಬ್ದುಲ್ ಖಾದಿರ್ ಮತ್ತು ಮಹಮ್ಮದ್ ಯೂಸುಫ್ ಎಂದು ಗುರುತಿಸಲಾಗಿದೆ. ಗಾಯಾಳುಗಳಾದ ಫೈಸಲ್ ಜಾಟ್, ಉಸಾಮಾ ಜಾವೇದ್, ಅಬಿದ್, ನದೀಮ್ ಮತ್ತು ನಾಸಿರ್ ಅಹ್ಮದ್ ಅವರಿಗೆ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.  ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ಆರಂಭಿಸಿದ್ದಾರೆ.